ಬಂಟ್ವಾಳ: ಇಲ್ಲಿನ ಮಂಚಿ ಸಮೀಪದ ಮೋಂತಿಮಾರು ಪಡ್ಡು ಬಸ್ ನಿಲ್ದಾಣದಲ್ಲಿ ಕಾಲೇಜಿಗೆ ತೆರಳಲು ಬಸ್ಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿಯಿಂದ ಹಲ್ಲೆ(Stabbed) ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಸೋಮವಾರ (ಜು.06) ಬೆಳಗ್ಗೆ ಸಂಭವಿಸಿದೆ.
ಸ್ಥಳೀಯ ನಿವಾಸಿ ಜವ್ವಾರ್ ಎಂಬಾತ ಹಲ್ಲೆಗೆ ಯತ್ನಿಸಿದ ಬಗ್ಗೆ ಆರೋಪ ಕೇಳಿಬಂದಿದೆ. ಆತ ಬಸ್ ನಿಲ್ದಾಣದ ಸಮೀಪ ದಿನಸಿ ಅಂಗಡಿ ನಡೆಸುತ್ತಿದ್ದಾನೆ ಎನ್ನಲಾಗಿದೆ.
ವಿದ್ಯಾರ್ಥಿನಿ ಬಸ್ಗಾಗಿ ಕಾಯುತ್ತಿದ್ದ ವೇಳೆ ಆರೋಪಿ ಚೂರಿಯಿಂದ ಹಲ್ಲೆ ನಡೆಸಿದ್ದಾನೆ. ಗಾಯಗೊಂಡ ವಿದ್ಯಾರ್ಥಿನಿಯನ್ನು ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ಇಲಾಖೆಯಿಂದ ಹೆಚ್ಚಿನ ಮಾಹಿತಿ ಬರಬೇಕಾಗಿದೆ.

